ಬೆಂಗಳೂರು: ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಲು ಬದ್ಧವಾಗಿರುವ ಸರ್ಕಾರ, ಶಾಲಾ ಹಂತದಲ್ಲಿ ‘ಪಾಸ್ ವಿಥೌಟ್ ಹಿಂದಿ’ (Pass Without Hindi) ನಿಯಮವನ್ನು ಜಾರಿಗೆ ತರುವ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದೆ. ಇಂದು ಬೆಂಗಳೂರಿನಲ್ಲಿ ನಡೆದ “ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಒಕ್ಕೂಟ”ದ ಪ್ರಮುಖರೊಂದಿಗಿನ ಸುದೀರ್ಘ ಚರ್ಚೆಯ ನಂತರ ಈ ಬೆಳವಣಿಗೆ ನಡೆದಿದೆ.
ಶಿಕ್ಷಣದಲ್ಲಿ ಅನ್ಯ ಭಾಷೆಯ ಹೇರಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ, ಹಿಂದಿ ವಿಷಯದಲ್ಲಿ ಉತ್ತೀರ್ಣರಾಗುವುದನ್ನು ಕಡ್ಡಾಯಗೊಳಿಸಬಾರದು ಎಂಬ ಒಕ್ಕೂಟದ ಬೇಡಿಕೆಯನ್ನು ಸರ್ಕಾರ ಸ್ವೀಕರಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಮಾಲೋಚಿಸಿ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ಹೋರಾಟ ಹಿಂಪಡೆದ ಕನ್ನಡ ಪರ ಸಂಘಟನೆಗಳು: ಇದೇ ಸಂದರ್ಭದಲ್ಲಿ, ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದ ಕನ್ನಡ ಪರ ಸಂಘಟನೆಗಳಿಗೆ ಸಚಿವರು ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಸರ್ಕಾರದ ಭರವಸೆಗೆ ಸ್ಪಂದಿಸಿದ ಹೋರಾಟಗಾರರು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಮ್ಮ ಮುತ್ತಿಗೆ ನಿರ್ಧಾರವನ್ನು ಸದ್ಯಕ್ಕೆ ಕೈಬಿಟ್ಟಿದ್ದಾರೆ. ಸಭೆಯಲ್ಲಿ ಹಿರಿಯ ಹೋರಾಟಗಾರರಾದ ಸಾ.ರ ಗೋವಿಂದ್, ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

