ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಚಾಮರಾಜನಗರ ಸೇರಿದಂತೆ ಸುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ 25ಕ್ಕೂ ಹೆಚ್ಚು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಪ್ರದೇಶವಾರು ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಕಲಬುರಗಿ ನಂತರ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೆ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲಿದೆ.
ಮಲೆಮಹದೇಶ್ವರ ಬೆಟ್ಟದಲ್ಲಿ ಜರ್ಮನ್ ಟೆಂಟ್ ನಡಿ ಸಂಪುಟ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ. ಇದಕ್ಕಾಗಿ ವಜ್ರಮಲೆ ಭವನದ ಸಮೀಪ ಜರ್ಮನ್ ಟೆಂಟ್ ಗಳನ್ನು ಅಳವಡಿಸಲಾಗಿದ್ದು, ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಸಾಮಾನ್ಯವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ಸಂಪುಟ ಸಭೆಗಳು ನಡೆಯುತ್ತವೆ. ಪ್ರಾದೇಶಿಕ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ವಿವಿಧ ಜಿಲ್ಲೆಗಳಲ್ಲಿ ಈ ಹಿಂದೆ ಸಂಪುಟ ಸಭೆ ನಡೆದಿದೆ. ಇದೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲಾಗುತ್ತಿದೆ.