ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಸ್ಟಾರ್ ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ರಾಕಾ ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲೇ ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರಗಳಲ್ಲೊಂದು. ಪ್ರತಿಷ್ಠಿತ ಬ್ಯಾನರ್ ಅಡಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಸಿದ್ಧವಾಗುತ್ತಿರುವ ಈ ಸಿನಿಮಾಗೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಅಪ್‌ಡೇಟ್‌ಗಳು ಹೊರಬರುತ್ತಿದ್ದು, ಇದೀಗ ಚಿತ್ರತಂಡಕ್ಕೆ ಹೊಸದಾಗಿ ತೆಲುಗು ನಟಿಯೊಬ್ಬರು ಸೇರ್ಪಡೆಯಾಗಿದ್ದಾರೆ.
ತೆಲುಗಿನ ಉದಯೋನ್ಮುಖ ನಟಿ ಸಿರಿ ಹನುಮಂತು ಈ ಬಿಗ್ ಬಜೆಟ್ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗಷ್ಟೇ ಸೀತಾ ಪಯಣಂ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಇವರು, ಪ್ರಸ್ತುತ ಚೆನ್ನೈ ಲವ್ ಸ್ಟೋರಿ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಖ್ಯಾತ ನಿರ್ಮಾಪಕ ಎಸ್‌ಕೆಎನ್ ಅವರು ಸಿರಿ ಹನುಮಂತು ಈ ಚಿತ್ರದಲ್ಲಿ ನಟಿಸುತ್ತಿರುವ ವಿಚಾರವನ್ನು ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ಆದರೆ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬ ವಿವರಗಳನ್ನು ಸದ್ಯಕ್ಕೆ ಗೌಪ್ಯವಾಗಿಡಲಾಗಿದೆ.
ಸದ್ಯ ರಾಕಾ ಚಿತ್ರದ ಚಿತ್ರೀಕರಣ ಮುಂಬೈನಲ್ಲಿ ಬಿರುಸಿನಿಂದ ಸಾಗುತ್ತಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವುದು ಈಗಾಗಲೇ ಖಚಿತವಾಗಿದೆ. ಸನ್ ಪಿಕ್ಚರ್ಸ್ ಸಂಸ್ಥೆ ಈ ಆಕ್ಷನ್ ಎಂಟರ್‌ಟೈನರ್ ಚಿತ್ರವನ್ನು ಭಾರಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಸಾಯಿ ಅಭ್ಯಂಕರ್ ಸಂಗೀತ ನೀಡುತ್ತಿದ್ದಾರೆ. ಈ ಚಿತ್ರವು 2027 ರ ಕೊನೆಯ ವೇಳೆಗೆ ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

