ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ತಂದು ಮಂಗಳೂರು ನಗರದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಗುರುವಾರ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲ ನಿವಾಸಿಗಳಾದ ಮುಸ್ತಫಾ, ಮಯ್ಯದ್ದಿ, ಮೊಹಮ್ಮದ್ ಶಿಫಾನ್ ಬಂಧಿತ ಆರೋಪಿಗಳು. ಉಳ್ಳಾಲದ ತಲಪಾಡಿ ಬಳಿ ಕಾರ್ ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 11.9 ಲಕ್ಷ ಮೌಲ್ಯದ 118 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಕಾರ್ ಗಳ ಸಹಿತ 17.95 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

