ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಭದ್ರಾವತಿ ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ.
ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿದ್ದ ಚಂದ್ರೋಜಿರಾವ್, ಅಬ್ದುಲ್ ಘನಿ, ಅಭಿಷೇಕ್ ಬಂಧಿತರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನೆಯ ವೇಳೆ ಕುಲಪತಿ ಕಚೇರಿಗೆ ನುಗ್ಗಿದ ಕೆಲವರು ಅಲ್ಲಿನ ಕುರ್ಚಿ ಪೀಠೋಪಕರಣ ಜಖಂಗೊಳಿಸಿ ಆವರಣದಲ್ಲಿದ್ದ ಹೂವಿನ ಗಿಡಗಳ ಕುಂಡಗಳನ್ನು ಒಡೆದು ಹಾಕಿದ್ದರು. ಕಿಟಕಿ ಗಾಜುಗಳಿಗೆ ಹಾನಿ ಮಾಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಡಿವೈಎಸ್ಪಿ ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸಿದ್ದು, 45 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ವಿಶ್ವವಿದ್ಯಾಲಯ ಆಡಳಿತ ಅಧಿಕಾರಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಅನುಮತಿ ಪಡೆಯದೆ ಪ್ರತಿಭಟನೆ ಆಯೋಜನೆ, ಸಾರ್ವಜನಿಕ ಆಸ್ತಿಗೆ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿ ಮೂವರನ್ನು ಬಂಧಿಸಲಾಗಿದೆ.

