ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು ತೇವಾಂಶ ಭರಿತ ಮೋಡಗಳಿಂದಾಗಿ ರಾಜ್ಯದ ಹಲವು ಕಡೆ ಮಾರ್ಚ್ 29 ರವರೆಗೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಕೊಡಗು, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಾರ್ಚ್ 25 ರಿಂದ ಎರಡು ದಿನ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 27 ರಿಂದ 29 ರವರೆಗೆ ಮಳೆಯಾಗಲಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ವಿಜಯಪುರ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಗಳಲ್ಲಿ ಮಾರ್ಚ್ 29ರಂದು ಸಾಧಾರಣ ಮಳೆ ಆಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಇಳಿಮುಖವಾಗಿದೆ ಎಂದು ಹೇಳಲಾಗಿದೆ.

