ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಪ್ರಶ್ನೆಗಳಿಗೆ ಉತ್ತರ ಸಿದ್ದಪಡಿಸುವ ಉದ್ದೇಶದಿಂದ ಕಂದಾಯ ಇಲಾಖೆಯ 9 ಶಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾರ್ಚ್ 19 ರಂದು ಗುರುವಾರ ಯುಗಾದಿ ಹಬ್ಬದ ರಜೆ ರದ್ದು ಮಾಡಲಾಗಿದೆ.
ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾಯ ಅವರ ಸೂಚನೆಯಂತೆ ಮುಜರಾಯಿ, ಭೂ ಮಂಜೂರಾತಿ ಸೇವೆಗಳು, ಭೂ ಕಂದಾಯ, ಭೂ ಮಾಪನ, ಭೂಮಿ ಮತ್ತು ಭೂ ಸುಧಾರಣಾ ಕೋಶದ ಅಧಿಕಾರಿ ವರ್ಗ ಗುರುವಾರ ಕಡ್ಡಾಯವಾಗಿ ಕಚೇರಿಗೆ ಹಾಜರಾಗಿ ವಿಧಾನಸಭೆಗೆ ಬಾಕಿ ಇರುವ ಪ್ರಶ್ನೆಗಳಿಗೆ ಉತ್ತರ ಸಿದ್ದಪಡಿಸಲು ಸೂಚನೆ ನೀಡಲಾಗಿದೆ.
ಸದನದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರ ಬಾರದ ಕಾರಣ ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆಯಲ್ಲಿ ಗರಂ ಆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಿತ ಇಲಾಖೆಗಳ ಕಾರ್ಯದರ್ಶಿಗಳಿಗೆ ಲಿಖಿತ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರ ಬಾರದ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ಕಟಾರಿಯಾ ಅವರಿಗೂ ನೋಟಿಸ್ ನೀಡಲಾಗಿತ್ತು. ಈ ಬೆಳವಣಿಗೆ ಬಳಿಕ ಕಂದಾಯ ಸಚಿವಾಲಯ ಸಿಬ್ಬಂದಿಗೆ ಯುಗಾದಿ ಹಬ್ಬದ ರಜೆಗೆ ಕೊಕ್ ನೀಡಲಾಗಿದ್ದು, ಉತ್ತರಗಳನ್ನು ಸಿದ್ಧಪಡಿಸಲು ಸೂಚಿಸಲಾಗಿದೆ.

