ತುಮಕೂರು: ಲಾರಿ ಹಾಗೂ ಬುಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಬಳಿ ನಡೆದಿದೆ.
ಮೃತರ ಪೈಕಿ ಓರ್ವನನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು, ಆತನ ಜೊತೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಬೆಂಗಳೂರಿನಿಂದ ಚಿತ್ರದುರ್ಗದತ್ತ ಟ್ರ್ಯಾಕ್ಟರ್‌ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನವು ಸೋರೆಕುಂಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬೊಲೇರೊ ಗೂಡ್ಸ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಇಬ್ಬರೂ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೋರಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

