ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆಯಾಗುತ್ತಿದೆ. ಸಾಲು ಸಾಲು ಅವಾಂತರಗಳೂ ಸೃಷ್ಟಿಯಾಗಿವೆ. ನದಿ-ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾದ ಪರಿಣಾಮ ನದಿಗಳಿಗೆ ನೀರು ಬೀಡಲಾಗುತ್ತಿದೆ. ಇದರಿಂದಾಗಿ ಹಲವು ಸೇತುಗಳು ಮುಳುಗಡೆಯಾಗಿ ಊರಿಗೆ ಊರೇ ಸಂಪರ್ಕ ಕಳೆದುಕೊಂಡಿವೆ.
ತುಂಗಭದ್ರಾ ಜಲಾಶಯ ಭರ್ತಿಯಾದ ಕಾರಣ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡಲಾಗಿದೆ. ಇದರಿಂದಾಗಿ ಬಳ್ಳಾರಿಯ ಕಂಪ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಗಂಗಾವತಿಹಾಗೂ ಬಳ್ಳಾರಿ ನಡುವೆ ಸಂಪರ್ಕವೇ ಬಂದ್ ಆಗಿದೆ.
ಕಂಪ್ಲಿ ಸೇತುವೆ ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ಗಂಗಾವತಿ-ಬಳ್ಳಾರಿ ನಡುವೆ ಸಂಪರ್ಕ ಕಡಿತಗೊಂಡಿದ್ದು, ಜನರು ಪರದಾಡುವಂತಾಗಿದೆ. ತುಂಗಭದ್ರಾ ನದಿಯಲ್ಲಿ ಕ್ಷಣ ಕ್ಷಣಕ್ಕೂ ಅಪಾಯದ ಮಟ್ಟದಲ್ಲಿ ನೀರು ಹರಿಯುತ್ತಿದ್ದು, ನದಿ ಪಾತ್ರದ ಜನರಿಗೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.