ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬಿಳಿಗೇರಿ ಗ್ರಾಮದ ಟಾಟಾ ಕಾಫಿ ತೋಟದಲ್ಲಿ ಘಟನೆ ನಡೆದಿದೆ. ಅಸ್ಸಾಂ ಮೂಲದ ಕಾರ್ಮಿಕರಾದ ಫರ್ಭಿನಾ ಖಾತೂನ್(29), ಅಲೆಮನ್(48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರೊಂದಿಗೆ ಇದ್ದ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸೋಮವಾರಪೇಟೆ ಪೊಲೀಸರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಿಎಂ ಡಾ.ಜಿ. ಪರಮೇಶ್ವರ್ ಸಂತಾಪ, ಪರಿಹಾರ ನೀಡಲು ಸೂಚನೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಿಳಿಗೆರೆ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಘಟನೆಯ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವಂತೆ ಹಾಗೂ ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದೇನೆ. ಮೃತರ ಕುಟುಂಬದ ದುಃಖದಲ್ಲಿ ನಾನೂ ಭಾಗಿ. ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬದೊಂದಿಗೆ ಸರ್ಕಾರ ನಿಲ್ಲಲಿದೆ ಎಂದು ಹೇಳಿದ್ದಾರೆ.

