ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮಸೂದೆಗೆ ಅನುಮೋದನೆ ನೀಡಲಾಯಿತು. ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದ ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ, 1 ಕೋಟಿ ದಂಡ ವಿಧಿಸಲು ಅವಕಾಶವಿರುವ ಮಸೂದೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ಮಾರ್ಗ ತಡೆಗಟ್ಟುವಿಕೆ )ತಿದ್ದುಪಡಿ ಬಿಲ್ ಮಸೂದೆಗೆ ಸಂಪುಟ ಸಭೆ ಅನುಮೋದನೆ ನೀಡಿದ್ದು, ಇಂದು ಸಂಸತ್ ನಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ. 2026ರ ಸಂಸತ್ ಮಳೆಗಾಲ ಅಧಿವೇಶನದ 5ನೇ ದಿನವಾದ ಶುಕ್ರವಾರ (ಜುಲೈ 24) ಕೂಡ ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಇಂಡಿಯಾ (INDIA) ಮೈತ್ರಿಕೂಟ ಉಭಯ ಸದನಗಳಲ್ಲಿ ತೀವ್ರ ಪ್ರತಿಭಟನೆ ನಡೆಸಿತು. ಜೊತೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿತು.
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎರಡೂ ಸದನಗಳ ಕಾರ್ಯಾಚರಣೆ ಪದೇ ಪದೇ ಮುಂದೂಡಲ್ಪಟ್ಟಿತು. ಕೊನೆಗೆ ಯಾವುದೇ ಮಹತ್ವದ ಕಲಾಪ ನಡೆಸದೇ ದಿನಪೂರ್ತಿ ಕಾರ್ಯಾಚರಣೆಯನ್ನು ಮುಂದೂಡಲಾಯಿತು.ಇದರ ಜೊತೆಗೆ, ಜುಲೈ 20ರಂದು ಕಾಕ್‌ರೋಚ್ ಜನತಾ ಪಾರ್ಟಿ (CJP) ಕರೆ ನೀಡಿದ್ದ ‘ಸಂಸತ್ ಚಲೋ’ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಕ್ರಮದ ಕುರಿತೂ ಚರ್ಚೆ ನಡೆಸಬೇಕೆಂದು ಪ್ರತಿಪಕ್ಷ ಒತ್ತಾಯಿಸಿತು.
ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಚರ್ಚೆಗೆ ಸರ್ಕಾರ ಸಮ್ಮತಿ
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು. ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ ಕೆಲವೇ ಗಂಟೆಗಳ ಬಳಿಕ ಮಾತನಾಡಿದ ಅವರು, “ಸೋನಂ ವಾಂಗ್ಚುಕ್ ಉಪವಾಸ ಮುಗಿಸಿದ್ದಾರೆ. ಈಗ ಈ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸೋಣ. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಚರ್ಚೆಗೆ ಅವಕಾಶ ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

