HomeLatest NewsBIG NEWS: ಕೃಷ್ಣಾ ಮೇಲ್ದಂಡೆ ಯೋಜನೆ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ: ನೀರಾವರಿ ಜಮೀನಿಗೆ...

BIG NEWS: ಕೃಷ್ಣಾ ಮೇಲ್ದಂಡೆ ಯೋಜನೆ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ: ನೀರಾವರಿ ಜಮೀನಿಗೆ 40 ಲಕ್ಷ: ಒಣಭೂಮಿಗೆ 30 ಲಕ್ಷ ಪರಿಹಾರ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ವಿಶೇಷ ಸಚಿವ ಸಂಪುಟ ಸಭೆ ನಡೆಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯುಕೆಪಿ ಹಂತ-3ರಿಂದ ರೈತರ ಜೀವನಮಟ್ಟ ಸುಧಾರಣೆಯಾಗಲಿದೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75000 ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಈ ಜಮೀನಿಗೆ 5.94 ಲಕ್ಷ ಹೆಕ್ಟೇರ್(ಸುಮಾರು 14 ರಿಂದ 15 ಲಕ್ಷ ಎಕರೆ) ಕ್ಕೂ ಭೂಮಿಯ ನೀರಾವರಿ ಕಲ್ಪಿಸಬಹುದಾಗಿದೆ. ಯುಕೆಪಿ ಹಂತ 3 ಬೃಹತ್ ನೀರಾವರಿ ಯೋಜನೆಯಾಗಿದ್ದು, ಈ ಭಾಗದ ರೈತರ ಜಮೀನಿಗೆ ನೀರೊದಗಿಸಿ, ಅವರ ಜೀವನ ಮಟ್ಟದ ಸುಧಾರಣೆಯಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಸಂಬಂಧಿಸಿದಂತೆ ರೈತರು, ರೈತ ಹೋರಾಟ ಸಂಘಗಳು, ಸಂಬಂಧಪಟ್ಟ ಶಾಸಕರು, ಸಚಿವರೊಂದಿಗೆ ಚರ್ಚೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಯೋಜನೆಗೆ ರೈತರಿಂದ ಸ್ವಾಧೀನಪಡಿಸಿಕೊಳ್ಳುವ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ, ಖುಷ್ಕಿ ಒಣಭೂಮಿಯ ಎಕರೆಯೊಂದಕ್ಕೆ 30 ಲಕ್ಷ ಪರಿಹಾರವನ್ನು ನೀಡಬೇಕೆಂದು ಸಚಿವ ಸಂಪುಟ ತೀರ್ಮಾನಿಸಿದೆ ಎಂದರು.

ಕಾಲುವೆ ತೋಡಲು ಸುಮಾರು 51,837 ಎಕರೆ ಬೇಕಾಗಿದ್ದು, ಇದರಲ್ಲಿ 23631 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ನಡೆಸಿ, ಕಾಮಗಾರಿ ಕೈಗೊಳ್ಳಲಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಸಂಬಂಧಿಸಿದಂತೆ ಒಣಭೂಮಿಯ ಎಕರೆಯೊಂದಕ್ಕೆ 25 ಲಕ್ಷ ಹಾಗೂ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 30 ಲಕ್ಷ ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ. ಕಾಲುವೆ ನಿರ್ಮಾಣದಲ್ಲಿ ಜಮೀನು ಕಳೆದುಕೊಂಡವರು ಯೋಜನೆಯ ಫಲಾನುಭವಿಗಳಾಗುತ್ತಾರೆ ಎಂದರು.

ಭೂಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಪರಿಹಾರವನ್ನು ಮೂರು ಆರ್ಥಿಕ ವರ್ಷದೊಳಗೆ ನೀಡಲು ತೀರ್ಮಾನಿಸಲಾಗಿದೆ. ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳಲು ರೈತರ ಮನವೊಲಿಸುವುದಾಗಿ ಸಂಬಂಧಪಟ್ಟ ಸಚಿವರು, ಶಾಸಕರು, ರೈತಮುಖಂಡರು ತಿಳಿಸಿದ್ದಾರೆ. ರಾಜ್ಯದ ಜನರಿಗೆ ಒಳಿತು ಮಾಡುವ ಈ ಸಾರ್ಥಕ ಯೋಜನೆಗೆ ಭೂಮಿ ನೀಡಲು ರೈತರು ಸಮ್ಮತಿಸಬಹುದೆಂಬ ಭರವಸೆಯಿದೆ. ಇದೊಂದು ಐತಿಹಾಸಿಕ ತೀರ್ಮಾನ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದ್ದರಿಂದ , ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು ಎಂದರು.

ಈ ಹಿಂದೆ ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಶಾಸಕರು, ರೈತಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಂದೇ ಬಾರಿಗೆ Consent award ನೀಡುವ ಬಗ್ಗೆ ಪರಿಗಣಿಸಿದ್ದರೂ, ಪರಿಹಾರಧನ ನಿಗಧಿಯಾಗಿರಲಿಲ್ಲ. ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ. ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನಿಡುತ್ತದೆ. ಆದರೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇದುವರೆಗೂ ಅಧಿಸೂಚನೆ ಹೊರಡಿಸಿಲ್ಲ. ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲು ಕೇಂದ್ರದವರನ್ನು ಹಲವು ಬಾರಿ ಭೇಟಿ ಮಾಡಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಲಾಗಿದೆ ಎಂದರು.

ರೈತರಿಗೆ ಪರಿಹಾರ ಧನ ಕೊಡುವ ನಿರ್ಣಯದಿಂದ ಸರ್ಕಾರದ ಮೇಲಾಗುವ ಆರ್ಥಿಕ ಹೊರೆಯ ಬಗ್ಗೆ 1,33,867 ಎಕರೆ ಜಮೀನು ಯೋಜನೆಗೆ ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ವವ್ಯಸ್ಥೆ ಕಾರ್ಯಗಳಿಗೆ 6469 ಎಕರೆಗಳ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು , ಕೆಲವು ಪಟ್ಟಣ ವಾರ್ಡ್ ಗಳು ಮುಳುಗಡೆಯಾಗುತ್ತಿದ್ದು, ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡುವ ಐತಿಹಾಸಿಕ ತೀರ್ಮಾನ ತಿಳಿಸಿದರು. ಈ ಉದ್ದೇಶಕ್ಕಾಗಿ ಪ್ರತಿವರ್ಷ ಸುಮಾರು 15 ರಿಂದ 20 ಸಾವಿರ ಕೋಟಿ ರೂಗಳ ವೆಚ್ಚ ಬರಲಿದೆ. ಒಟ್ಟಾರೆ ಈ ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ. ಗಳು ವೆಚ್ಚವಾಗುವ ಅಂದಾಜು ಇದೆ ಎಂದು ವಿವರಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular