ಲಖನೌ: ಉತ್ತರ ಪ್ರದೇಶದ ಲಖನೌದಲ್ಲಿ ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದರವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಈವರೆಗೆ 15 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕೋಚಿಂಗ್ ಸೆಂಟರ್ ಇದ್ದ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟಿರುವ 14 ವಿದ್ಯಾರ್ಥಿಗಳ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದಿಂದ ಹೊರತೆಗೆದಿದ್ದಾರೆ. ಬೆಂಕಿ ಅವಘಡದಿಂದಾಗಿ ಕಟ್ಟಡ ಹೊತ್ತಿ ಉರಿಯುತ್ತಿದ್ದಂತೆ ಜೀವ ಉಳಿಸಿಕೊಳ್ಳಲು ಹಲವರು ಕಟ್ಟಡದಿಂದ ಕೆಳಗೆ ಜಿಗಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಬೆಂಕಿ ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ. ಪೂರ್ಣಿಯಾ ವಲಯದಲ್ಲಿರುವ ವಾಣಿಜ್ಯ ಕಟ್ಟಡದ ಮೇಲಿನ ಮಹಡಿಯಲ್ಲಿ ಈ ಕೋಚಿಂಗ್ ಸಂಸ್ಥೆ ಕಾರ್ಯನಿರ್ವಹಿಸುತ್ತಿತ್ತು. ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಕಟ್ಟಡದ ಭಾಗಗಳನ್ನು ವೇಗವಾಗಿ ಆವರಿಸಿದ್ದರಿಂದ, ಹಲವಾರು ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಜಿಗಿದಿದ್ದಾರೆ. ಆದರೂ ಒಳಗೆ ಹಲವು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರೆದಿದೆ. ದುರಂತದಲ್ಲಿ 15 ಜನರು ಮೃತಪಟ್ಯಿದ್ದಾರೆ.
ಭೀಕರ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಹಿಸಲಾರದ ಘಟನೆ ಇದಾಗಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಧನವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
ಇನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ಘಟನೆಯ ಬಗ್ಗೆ ತೀವ್ರ ಕಳವಳ ಮತ್ತು ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಗೊಂಡ ಎಲ್ಲರಿಗೂ ಉಚಿತ ಮತ್ತು ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅವರು ಸ್ಥಳೀಯ ಆಡಳಿತಕ್ಕೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

