HomeKarnataka'ಉದ್ಯೋಗ ಖಾತ್ರಿ' ಕೂಲಿ ಪಾವತಿಯಲ್ಲಿ ವಿಳಂಬ: 394 ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲು ಸಚಿವ ಈಶ್ವರ್...

‘ಉದ್ಯೋಗ ಖಾತ್ರಿ’ ಕೂಲಿ ಪಾವತಿಯಲ್ಲಿ ವಿಳಂಬ: 394 ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲು ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಪಾವತಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ 308 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO), 74 ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು (EO) ಮತ್ತು 12 ಉಪ ಕಾರ್ಯದರ್ಶಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಆದೇಶಿಸಿದ್ದಾರೆ.

ವಿಕಸಿತ ಭಾರತ್–ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G) ಯೋಜನೆಯಡಿ 12 ಜಿಲ್ಲೆಗಳ 311 ಗ್ರಾಮ ಪಂಚಾಯಿತಿಗಳಲ್ಲಿ ಕೂಲಿ ಪಾವತಿ ವಿಳಂಬವಾಗಿರುವುದನ್ನು ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಸಂಬಂಧ ಇಲಾಖೆಯ ಕಾರ್ಯದರ್ಶಿ ಹಾಗೂ 12 ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಲಿಖಿತ ಸೂಚನೆ ನೀಡಿದ್ದಾರೆ.

ಯೋಜನೆಯಡಿ ಕೆಲಸ ಮಾಡಿದ ಫಲಾನುಭವಿಗಳಿಗೆ 15 ದಿನಗಳೊಳಗೆ ಕೂಲಿ ಪಾವತಿಸಬೇಕು. ನಿಗದಿತ ಅವಧಿಯಲ್ಲಿ ಪಾವತಿ ಮಾಡದಿದ್ದರೆ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಈ ಹಿಂದೆ ಸ್ಪಷ್ಟ ಸೂಚನೆ ನೀಡಲಾಗಿತ್ತು. ಆದರೂ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಕೂಲಿ ಪಾವತಿ ವಿಳಂಬವಾಗಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರದ ನಡುವೆಯೂ ಕೆಲಸಕ್ಕೆ ಬರಲು ಕಾರ್ಮಿಕರ ಹಿಂದೇಟು!

ಗ್ರಾಮ ಪಂಚಾಯಿತಿಗಳಿಗೆ ಹಣ ಬಿಡುಗಡೆಯಾದ ಬಳಿಕವೂ ಕೌಶಲ್ಯರಹಿತ ಕಾರ್ಮಿಕರಿಗೆ ಕೂಲಿ ಪಾವತಿಸದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಸಚಿವರು ಹೇಳಿದ್ದಾರೆ. ಬರ ಪರಿಸ್ಥಿತಿಯಲ್ಲಿಯೂ ಇಂತಹ ವಿಳಂಬದಿಂದಾಗಿ ಜನರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಅನಿವಾರ್ಯವಾಗಿ ವಲಸೆ ಹೋಗುವ ಪರಿಸ್ಥಿತಿಯೂ ನಿರ್ಮಾಣವಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಗ್ರಾಮ ಪಂಚಾಯಿತಿಗಳಲ್ಲಿ ವಿಳಂಬ?

  • ಬಾಗಲಕೋಟೆ – 23

  • ಬೆಳಗಾವಿ – 52

  • ಚಾಮರಾಜನಗರ – 13

  • ಚಿಕ್ಕಮಗಳೂರು – 14

  • ದಕ್ಷಿಣ ಕನ್ನಡ – 15

  • ಹಾಸನ – 47

  • ಕೊಡಗು – 25

  • ಮಂಡ್ಯ – 13

  • ಮೈಸೂರು – 53

  • ಶಿವಮೊಗ್ಗ – 14

  • ಉಡುಪಿ – 23

  • ವಿಜಯಪುರ – 16

ಈ 12 ಜಿಲ್ಲೆಗಳ ಒಟ್ಟು 311 ಗ್ರಾಮ ಪಂಚಾಯಿತಿಗಳಲ್ಲಿ ಕೂಲಿ ಪಾವತಿ ವಿಳಂಬವಾಗಿದೆ.

ಮುಂದೆ ವಿಳಂಬವಾಗದಂತೆ ಕಟ್ಟುನಿಟ್ಟಿನ ಸೂಚನೆ

ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ PDOಗಳು, ಮೇಲ್ವಿಚಾರಣೆಯ ಜವಾಬ್ದಾರಿ ಹೊಂದಿರುವ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ 12 ಜಿಲ್ಲಾ ಪಂಚಾಯಿತಿಗಳ ಉಪ ಕಾರ್ಯದರ್ಶಿಗಳಿಂದ ವಿವರಣೆ ಪಡೆಯಲು ಸಚಿವರು ಸೂಚಿಸಿದ್ದಾರೆ. ಭವಿಷ್ಯದಲ್ಲಿ ಯಾವುದೇ ಗ್ರಾಮ ಪಂಚಾಯಿತಿಯಲ್ಲಿಯೂ ಕೂಲಿ ಪಾವತಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಜ್ಯ ಸರ್ಕಾರದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದ ಅನುಪಾತವನ್ನು 90:10ರಿಂದ VB-G RAM G ಯೋಜನೆಯಲ್ಲಿ 60:40ಕ್ಕೆ ಬದಲಿಸಿರುವುದರಿಂದ ರಾಜ್ಯ ಸರ್ಕಾರದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬಿದ್ದಿದೆ ಎಂದು ಸಚಿವರು ತಿಳಿಸಿದ್ದಾರೆ.

ಆದರೂ ಗ್ರಾಮೀಣ ಬಡವರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡವರು ಹಾಗೂ ಭೂರಹಿತ ಕಾರ್ಮಿಕರಿಗೆ ನೆರವಾಗಬೇಕು ಮತ್ತು ಅವರು ವಲಸೆ ಹೋಗುವುದನ್ನು ತಡೆಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜುಲೈ 1ರಿಂದ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕೂಲಿ ಪಾವತಿ ವಿಳಂಬದಿಂದ ಯೋಜನೆಯ ಮೂಲ ಉದ್ದೇಶವೇ ವಿಫಲವಾಗುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular