ಬೆಂಗಳೂರು: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸಾಧಿಸಿರುವ ಗೆಲುವು ಪಕ್ಷದ ಕಾರ್ಯಕರ್ತರಿಗೆ ಸಂದ ಜಯವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಶಾಮನೂರು ಅವರು ಬಿಜೆಪಿ ಅಭ್ಯರ್ಥಿಗಳನ್ನು ಮಣಿಸಿ ವಿಜಯ ಮಾಲೆ ಧರಿಸಿದ್ದಾರೆ. ಈ ಫಲಿತಾಂಶ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನತೆ ನೀಡಿದ ಸಮ್ಮತಿಯಾಗಿದೆ.
ಗ್ಯಾರಂಟಿಗಳಿಗೆ ಜನರಿಂದ ಸಿಕ್ಕ ಮನ್ನಣೆ, ಕಾಂಗ್ರೆಸ್ ಕಾರ್ಯಕರ್ತರ ಜಯ ಇದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ನಾಯಕರ ಸಂಘಟಿತ ಗೆಲುವು ಎಂದು ಹೇಳಿದ್ದಾರೆ.
ಉಪ ಚುನಾವಣೆಯಲ್ಲಿ ಗೆದ್ದ ಇಬ್ಬರು ನೂತನ ಶಾಸಕರಿಗೆ ಅಭಿನಂದನೆಗಳು. ಗೆಲುವಿಗಾಗಿ ಶ್ರಮಿಸಿದ ಕಾಂಗ್ರೆಸ್ ಪಕ್ಷದ ನಾಯಕರು, ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಸೇರಿದಂತೆ ಎಲ್ಲರಿಗೂ ಧನ್ಯವಾದಗಳು ಸುರ್ಜೇವಾಲ ತಿಳಿಸಿದ್ದಾರೆ.

