HomeKarnatakaಇಂದಿನಿಂದ ವಿಧಾನ ಮಂಡಲ ವಿಶೇಷ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ

ಇಂದಿನಿಂದ ವಿಧಾನ ಮಂಡಲ ವಿಶೇಷ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ಪಶ್ಚಿಮ ಘಟ್ಟ ಕುರಿತ ಕಸ್ತೂರಿ ರಂಗನ್ ಸಮಿತಿ ವರದಿ ಬಗ್ಗೆ ಚರ್ಚೆ ನಡೆಸಲಾಗುವುದು. ಕೇಂದ್ರದ ಕರಡು ಅಧಿಸೂಚನೆ ವಿರುದ್ಧ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಬರ ಪರಿಹಾರ ಕ್ರಮಗಳು, ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಬಗ್ಗೆ ಸರ್ಕಾರ ಘೋಷಣೆ ಮಾಡುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಮತ್ತು ಪಶ್ಚಿಮ ಘಟ್ಟ ಕುರಿತಾದ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆ ವಿರುದ್ಧ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನ ಮಂಡಲ ವಿಶೇಷ ಅಧಿವೇಶನ ನಡೆಯಲಿದೆ.

ಸೆಪ್ಟೆಂಬರ್ 21ರಿಂದ 23ರ ವರೆಗೆ ನಡೆಯುವ ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಸುದೀರ್ಘ ಚರ್ಚೆ ನಡೆಸಿ ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಅಭಿಪ್ರಾಯದಂತೆ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ವಿರುದ್ಧ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಸ್ತೂರಿ ರಂಗನ್ ವರದಿ ಆಧರಿಸಿ ರಾಜ್ಯ ಪಶ್ಚಿಮ ಘಟ್ಟ ಪ್ರದೇಶದ 20,668 ಚ.ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಿ ಕೇಂದ್ರ ಸರ್ಕಾರ ಕರೂರ್ ಅಧಿಸೂಚನೆ ಹೊರಡಿಸಿದೆ. ಇದರಿಂದ 1449 ಗ್ರಾಮಗಳ ಜನರ ಬದುಕು ಅತಂತ್ರವಾಗುವ ಆತಂಕವಿದೆ. ವರದಿ ಬಗ್ಗೆ ಆಡಳಿತ ಪಕ್ಷ, ಪ್ರತಿಪಕ್ಷಗಳಿಂದಲೂ ವಿರೋಧ ವ್ಯಕ್ತವಾಗಿದೆ. ವಿಶೇಷ ಅಧಿವೇಶನ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಅಭಿಪ್ರಾಯ ಆಲಿಸಿದ್ದಾರೆ. ಈ ಬಗ್ಗೆ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ನಿಯೋಗ ಕರೆದೊಯ್ಯುವ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ, ರೈತರ ಜ್ವಲಂತ ಸಮಸ್ಯೆಗಳು ಹಾಗೂ ಪಶ್ಚಿಮಘಟ್ಟ ರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಕುರಿತು ವಿಧಾನ ಮಂಡಲ ಉಭಯ ಸದನಗಳ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು.

ಸೋಮವಾರ ಬೆಳಗ್ಗೆ 11 ಗಂಟೆಗೆ ಉಭಯ ಸದನಗಳ ಕಾರ್ಯ ಕಲಾಪ ಅಧಿಕೃತವಾಗಿ ಆರಂಭವಾಗಲಿದೆ. ರಾಜ್ಯದ ಪ್ರಸ್ತುತ ವಾಸ್ತವಿಕ ಸ್ಥಿತಿಗತಿಗಳ ಹಿನ್ನೆಲೆಯಲ್ಲಿ ಈ ವಿಶೇಷ ಅಧಿವೇಶನ ಅತ್ಯಂತ ಮಹತ್ವ ಪಡೆದುಕೊಂಡಿದೆ. ಸಾಮಾನ್ಯ ಅಧಿವೇಶನಕ್ಕಿಂತ ವಿಭಿನ್ನವಾಗಿ ಈ ವಿಶೇಷ ಅಧಿವೇಶನದಲ್ಲಿ ರಾಜ್ಯದ ಎರಡು ಪ್ರಮುಖ ಸವಾಲುಗಳಾದ ಬರ ಪರಿಸ್ಥಿತಿ ಮತ್ತು ಕಸ್ತೂರಿರಂಗನ್ ವರದಿ ಕೇಂದ್ರ ಬಿಂದುವಾಗುವ ಸಾಧ್ಯತೆ ಇದೆ.

ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ತಂಡ ನೀಡಿದ ವರದಿಯನ್ನಾಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯಿಂದ ಮಲೆನಾಡು ಹಾಗೂ ಕರಾವಳಿ ಭಾಗದ ಜನರಲ್ಲಿ ಆತಂಕ ವ್ಯಕ್ತವಾಗಿದೆ. ವರದಿಯ ಸಾಧಕ-ಬಾಧಕಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ, ರಾಜ್ಯದ ಸ್ಪಷ್ಟ ನಿಲುವನ್ನು ನಿರ್ಣಯದ ಮೂಲಕ ಕೇಂದ್ರಕ್ಕೆ ತಲುಪಿಸುವುದು ಈ ಅಧಿವೇಶನದ ಮುಖ್ಯ ಉದ್ದೇಶವಾಗಿದೆ.

ಮುಂಗಾರು ಮಳೆ ಕೊರತೆಯಾಗಿ ರಾಜ್ಯದ ವಿವಿಧೆಡೆ ಬೆಳೆಗಳು ಒಣಗುತ್ತಿದ್ದು, ಕುಡಿಯುವ ನೀರು, ಜಾನುವಾರುಗಳ ಮೇವು ಹಾಗೂ ವಿದ್ಯುತ್ ಅಭಾವ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕೃಷಿ ವಲಯ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಸದನದಲ್ಲಿ ಚರ್ಚೆ ನಡೆಯಲಿದೆ. ವಿಶೇಷ ಅಧಿವೇಶನದಲ್ಲಿ ಬೆಳೆ ನಷ್ಟಕ್ಕೆ ಪರಿಹಾರ, ಸಾಲದ ಒತ್ತಡ, ಜಾನುವಾರುಗಳಿಗೆ ಮೇವು, ಕುಡಿಯುವ ನೀರು, ವಿದ್ಯುತ್ ಪೂರೈಕೆ, ಕೇಂದ್ರದಿಂದ ಬರಬೇಕಿರುವ ಬರ ಪರಿಹಾರ ಸೇರಿದಂತೆ ರೈತರಿಗೆ ನೇರವಾಗಿ ಸಂಬಂಧಿಸಿದ ಹಲವು ವಿಚಾರಗಳು ಪ್ರಸ್ತಾಪವಾಗುವ ಸಾಧ್ಯತೆಯಿದೆ.

ವಿಶೇಷ ಅಧಿವೇಶನದಲ್ಲಿ ಡಾ.ಕೆ.ಕಸ್ತೂರಿ ರಂಗನ್ ವರದಿ ಕರಡು ಬಗ್ಗೆ ಚರ್ಚಿಸಿ, ಅಧಿಸೂಚನೆ ವಿರುದ್ಧ ನಿರ್ಣಯ ಮಂಡಿಸಲು ಸರ್ಕಾರ ಮುಂದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular