ಚೆನ್ನೈ: ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೂ ಸರ್ಕಾರ ರಚನೆಗೆ ನಿರ್ಧಿಷ್ಟ ಸಂಖ್ಯಾ ಬಲ ಕೊರತೆ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಸರ್ಕಾರ ರಚನೆಗೆ ಸಮ್ಮತಿ ಸೂಚಿಸಿಲ್ಲ. ಸರ್ಕಾರ ರಚನೆಗೆ ಅಗತ್ಯವಾಗಿರುವ 118 ಶಾಸಕರ ಬೆಂಬಲ ಪಡೆದು ಸರ್ಕಾರ ರಚನೆ ಮಾಡುವಂತೆ ವಿಜಯ್ ಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಚನೆಗಾಗಿ ವಿಜಯ್ ಕಸರತ್ತು ಮುಂದುವರೆಸಿದ್ದಾರೆ. ಈ ಬೆಳವಣಿಗೆಗಳಿಂದ ಬೇಸತ್ತ ವಿಜಯ್ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಅತಿರೇಕದ ಘಟನೆ ನಡೆದಿದೆ.
ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಸರ್ಕಾರ ರಚನೆಗೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನೊಂದ ವಿಜಯ್ ಅಭಿಮಾನಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಿರುನಲ್ವೇಲಿಯಲ್ಲಿ ಈ ಘಟನೆ ನಡೆದಿದೆ.
ಇಸಕ್ಕಿರಾಜ (47) ಎಂಬ ವಿಜಯ್ ಅಭಿಮಾನಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಸಕ್ಕಿರಾಜ್ ಅವರ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯ್ ಮುಖ್ಯಮಂತ್ರಿಯಾಗುವುದನ್ನು ನಾನು ನೋಡಬೇಕು. ಆದರೆ ಸರ್ಕಾರ ರಚನೆಗೆ ವಿಳಂಬವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ.
ವಿಜಯ್ ಸರ್ಕಾರ ರಚನೆಗೆ ಆಹ್ವಾನಿಸಲು ರಾಜ್ಯಪಾಲರು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಎರಡು ದಿನಗಳ ಹಿಂದೆ ಚೆನ್ನೈನ ಲೋಕಭವನದ ಎದುರು ಟಿವಿಕೆ ಕಾರ್ಯಕರ್ತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಗಮನಿಸಿದ ಪೊಲೀಸರು ಆತನನ್ನು ತಡೆದು ರಕ್ಷಿಸಿದ್ದರು. ಇದೀಗ ತಿರುವನ್ವೇಲಿಯಲ್ಲಿ ವಿಜಯ್ ಅಭಿಮಾನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

