ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದು ಮೂರ್ಖತನವನ್ನು ಪ್ರದರ್ಶಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆ, ಕಾರ್ಯಚಟುವಟಿಕೆ ಕುರಿತು ಮಾಹಿತಿ ಕೊರತೆ ಇರುವವರು ಕೇವಲ ತಮ್ಮ ಪ್ರಚಾರದ ಚಟದಿಂದ ಮಾತನಾಡುವವರು ಇಂತಹ ಹೇಳಿಕೆ ಕೊಡಲು ಸಾಧ್ಯ. ಈ ಹಿಂದೆ ಎರಡ್ಮೂರು ಬಾರಿ ಕಾಂಗ್ರೆಸ್ ಪಕ್ಷ ಆರ್.ಎಸ್.ಎಸ್ ನ್ನು ನಿಷೇಧಿಸಿತ್ತು. ಅದೇ ಕಾಂಗ್ರೆಸ್ ಪಕ್ಷ ನಿಷೇಧವನ್ನು ಹಿಂದಕ್ಕೆ ಪಡೆದ ಉದಾಹರಣೆಗಳೂ ದೇಶದ ಮುಂದಿದೆ. ಮತ್ತೊಮ್ಮೆ ಆರ್.ಎಸ್.ಎಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಹೇಳಿದರು.
ಭಾರತ-ಚೀನಾ ಯುದ್ಧದ ಸಂದರ್ಭದಲ್ಲಿ ಆರ್.ಎಸ್.ಎಸ್ ಚಟುವಟಿಕೆಯನ್ನು ಗಮನಿಸಿ ಶ್ಲಾಘಿಸಿ ಅಂದಿನ ರಿಪಬ್ಲಿಕ್ ಡೇ ಪರೇಡ್ ನಲ್ಲಿ ಆರ್ ಎಸ್ ಎಸ್ ಗೆ ಇದೇ ಕಾಂಗ್ರೆಸ್ ಪಕ್ಷ ಅವಕಾಶ ಮಾಡಿಕೊಟ್ಟಿತ್ತು ಎಂದು ಪ್ರಿಯಾಂಕ್ ಖರ್ಗೆ ಅವರಿಗೆ ನೆನಪಿಸಲು ಬಯಸುತ್ತೇನೆ ಎಂದಿದ್ದಾರೆ.