ಚೆನ್ನೈ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರು, ಯುವ ಜನತೆ ಸಿಡಿದೆದ್ದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಳು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ನಡುವೆ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷ, ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ದೇಶದಾದ್ಯಂತ ಭಾರಿ ಸಂಚಲನ ಮೂಡಿಸುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಟಿವಿಕೆ ಪಕ್ಷ ತನ್ನ ನಿಲುವು ಸ್ಪಷ್ಟಪಡಿಸಿದೆ. ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದೆ.
ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು. ಶಿಕ್ಷಣವನ್ನು ಕೇಂದ್ರದ ಸಮವರ್ತಿ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕು ಎಂದು ತಿಳಿಸಿದೆ.
ಸಾಧ್ಯವಾಗದಿದ್ದರೆ, ಮಧ್ಯಂತರ ಕ್ರಮವಾಗಿ ವಿಶೇಷ ವ್ಯವಸ್ಥೆ ರೂಪಿಸಿ ರಾಜ್ಯಗಳಿಗೆ ವೈದ್ಯಕೀಯ ಶಿಕ್ಷಣ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಸಲಹೆ ನೀಡಿದೆ.
ನೀಟ್ ರದ್ದು ಮಾಡುತ್ತೇವೆ ಎಂದು ಹೇಳಿ ಜನರ ಮತ ಪಡೆಯುವ ರಾಜಕೀಯವನ್ನು ನಾವು ಮಾಡುವುದಿಲ್ಲ. ನೀಟ್ ಪರೀಕ್ಷೆ ಸಂಫುರ್ಣವಾಗಿ ರದ್ದಾಗಬೇಕು ಎಂದು ಸ್ಪಷ್ಟಪಡಿಸಿದೆ.

