ಶಿವಮೊಗ್ಗ: ಭೂ ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕ ಚಿಕ್ಕಜಂಬೂರು ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ವಿಠಲ್(55) ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ. ಶುಕ್ರವಾರ ಸಂಜೆ ಲಂಚ ಸ್ವೀಕರಿಸುವಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಗ್ರಾಮ ಲೆಕ್ಕಾಧಿಕಾರಿ ವಿಠಲ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಝಕ್ರಿಯಾ ಬೇಗ್ ಎಂಬುವರಿಗೆ ಭೂ ಖಾತೆ ಮಾಡಿಕೊಡಲು 4 ಲಕ್ಷ ರೂ. ನೀಡುವಂತೆ ಬೇಡಿಕೆ ಇಡಲಾಗಿತ್ತು.
ಒಂದು ಲಕ್ಷ ರೂಪಾಯಿ ಲಂಚದ ಹಣ ಸ್ವೀಕರಿಸುವಾಗ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಲಂಚದ ಹಣದ ಸಮೇತ ವಿಠ್ಠಲ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್ಪಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ್ ಮೇಲ್ವಿಚಾರಣೆಯಲ್ಲಿ ಪಿಐ ಗುರುರಾಜ್ ಮೈಲಾರ, ರುದ್ರೇಶ್, ವೀರಬಸಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

