ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ಮತ್ತೆ ಜೈಲು ಸೇರಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಮೇಲೆ ಬಿಡುಗಡೆಯಾಗಿದ್ದ ವಿನಯ್ ಕುಲಕರ್ಣಿ ಅವರ ವಿರುದ್ಧ ಸಾಕ್ಷ್ಯ ನಾಶ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಈ ಪ್ರಕರಣದಲ್ಲಿ ಜಾಮೂನು ಕೋರಿ ಶಾಸಕ ವಿನಯ್ ಕುಲಕರ್ಣಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಪೀಠ, ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದೆ.
ಅಲ್ಲದೇ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿರುವ ಕಾರಣ ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ್ದು, ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ವಿನಯ್ ಕುಲಕರ್ಣಿಗೆ ಮತ್ತೆ ಹಿನ್ನಡೆಯಾಗಿದೆ.

