ರೈಲು ಅಥವಾ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಮಹಿಳೆಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಹರಿದಾಡುತ್ತಿರುವ ವಿಡಿಯೋವೊಂದು ನಾಗರಿಕ ಸಮಾಜ ತಲೆತಗ್ಗಿಸುವಂತಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಘಟನೆಯ ವಿವರ ವೈರಲ್ ಆಗಿರುವ ವಿಡಿಯೋದಲ್ಲಿ ಚಲಿಸುವ ರೈಲಿನಲ್ಲಿ ಮಹಿಳೆಯೊಬ್ಬರು ಸೀಟಿನಲ್ಲಿ ಮಲಗಿರುವುದು ಕಂಡುಬರುತ್ತದೆ. ಇದೇ ವೇಳೆ ಪಕ್ಕದಲ್ಲೇ ಕುಳಿತಿದ್ದ ವೃದ್ಧನೊಬ್ಬ ಆಕೆಯ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡು ವಿಕೃತಿ ಮೆರೆದಿದ್ದಾನೆ. ತಾನು ಕೂಡ ನಿದ್ರೆ ಮಾಡುತ್ತಿರುವಂತೆ ನಟಿಸುತ್ತಾ, ಆಕೆಯ ಮೇಲೆ ಪದೇ ಪದೇ ವಾಲುವುದು ಹಾಗೂ ಅಸಭ್ಯವಾಗಿ ಸ್ಪರ್ಶಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಪಕ್ಕದಲ್ಲಿದ್ದ ಪ್ರಯಾಣಿಕರು ಈ ಘಟನೆಯನ್ನು ಗಮನಿಸಿ ವಿಡಿಯೋ ಮಾಡಿದ್ದು, ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡಿದ್ದಾರೆ. ವೃದ್ಧನ ಈ ನಾಚಿಕೆಗೇಡಿನ ವರ್ತನೆಗೆ ಇಂಟರ್ನೆಟ್ ಲೋಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ವಯಸ್ಸಿಗೆ ಗೌರವ ಕೊಡಬೇಕಾದವರೇ ಇಂತಹ ನೀಚ ಕೆಲಸಕ್ಕೆ ಕೈಹಾಕಿದರೆ ಹೆಣ್ಣುಮಕ್ಕಳು ಯಾರನ್ನು ನಂಬಬೇಕು ಎಂದು ಜನರು ಪ್ರಶ್ನಿಸುತ್ತಿದ್ದಾರೆ.
ಸುರಕ್ಷತೆಗಾಗಿ ನೆಟ್ಟಿಗರ ಆಗ್ರಹ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ರೈಲ್ವೆ ಇಲಾಖೆ ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತೆಯರು ತಕ್ಷಣ ದೂರು ನೀಡಲು ಪೂರಕವಾದ ವ್ಯವಸ್ಥೆಗಳನ್ನು ಜಾರಿಗೆ ತರಬೇಕು ಎಂಬ ಒತ್ತಾಯ ಕೇಳಿಬಂದಿದೆ.
ರೈಲುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಸಂಖ್ಯೆ ಹೆಚ್ಚಿಸುವುದು ಹಾಗೂ ಭದ್ರತಾ ಸಿಬ್ಬಂದಿಯ ಗಸ್ತು ಹೆಚ್ಚಿಸುವ ಮೂಲಕ ಇಂತಹ ಕಿಡಿಗೇಡಿಗಳಿಗೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

