ಬಯಲುಸೀಮೆ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಭರ್ತಿ: ಜ.18 ಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

ಚಿತ್ರದುರ್ಗ: ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇದೇ ಜ.18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿ.ವಿ ಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದ್ದಾರೆ.

ಹಿರಿಯೂರು ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ವಾಣಿವಿಲಾಸ ಸಾಗರ ಜಲಾಶಯದ ಬಾಗಿನ ಅರ್ಪಣೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

120 ವರ್ಷಗಳಲ್ಲಿ ಮೂರನೇ ಬಾರಿಗೆ ವಾಣಿವಿಲಾಸ ಸಾಗರ ಜಲಾಶಯ ತುಂಬಿದೆ. ಜ.18ರಂದು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಆಗಮಿಸಿ, ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದು, ಸುಮಾರು 20 ರಿಂದ 24 ಸಾವಿರ ಜನ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಆರೋಗ್ಯ ಇಲಾಖೆ ವತಿಯಿಂದ ತಾತ್ಕಾಲಿಕವಾಗಿ ಆರೋಗ್ಯ ಕ್ಲಿನಿಕ್ ತೆರೆದು ಜನರಿಗೆ ಆರೋಗ್ಯ ಸೇವೆ ನೀಡಬೇಕು. ಇದರ ಜೊತೆಗೆ ಆರೋಗ್ಯ ತಂಡ ನಿಯೋಜನೆ ಹಾಗೂ ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದ್ದು, ಊಟದ ವ್ಯವಸ್ಥೆ ಮೇಲುಸ್ತುವಾರಿಗಾಗಿ ಆಹಾರ ಇಲಾಖೆಯಿಂದ ತಂಡ ನಿಯೋಜನೆ ಮಾಡಿ, ಊಟದ ಮೇಲುಸ್ತುವಾರಿ ನೋಡಿಕೊಳ್ಳುವಂತೆ ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್ ಅವರಿಗೆ ತಿಳಿಸಿದರು.

ಅಲ್ಲದೆ, ಸಾರ್ವಜನಿಕರಿಗೆ ಊಟದ ಪೂರೈಕೆ ಮಾಡುವ ಮೊದಲು ಆಹಾರ ಸುರಕ್ಷತೆಯ ಗುಣಮಟ್ಟ ಪರೀಕ್ಷಿಸಬೇಕು ಎಂದು ಸೂಚನೆ ನೀಡಿದರು.  ಕಾರ್ಯಕ್ರಮ ಜರುಗುವ ಸ್ಥಳಗಳಲ್ಲಿ ವಿದ್ಯುತ್ ಮಾರ್ಗಗಳ ಸುರಕ್ಷತೆ, ಬ್ಯಾರಿಕೇಡಿಂಗ್, ಶಿಷ್ಟಾಚಾರ ಪಾಲನೆ, ವಿವಿ ಸಾಗರ ಜಲಾಶಯ ಬಳಿಯ ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆ ಕಾಯ್ದುಕೊಳ್ಳುವುದು, ಜಲಾಶಯದಲ್ಲಿ ಲೈಫ್ ಜಾಕೆಟ್‍ನೊಂದಿಗೆ ಬೋಟಿಂಗ್ ಸಿದ್ಧತೆ ಮಾಡಿಕೊಂಡಿರಬೇಕು, ಮುಖ್ಯಮಂತ್ರಿಗಳ ಸ್ವಾಗತಕ್ಕೆ ವಿವಿಧ ಕಲಾತಂಡಗಳನ್ನು ನಿಯೋಜಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಎಫ್.ಹೆಚ್. ಲಮಾಣಿ, ಕಾರ್ಯಪಾಲಕ ಅಭಿಯಂತರ ಚಂದ್ರಪ್ಪ ಬಾರಿಕರ, ಪ್ರಭಾರ ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್  ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಹಿರಿಯೂರು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read