ಬೆಂಗಳೂರು: ಮುಸ್ಲಿಮರ ವಿವಾಹ ನೋಂದಣಿ ಮತ್ತು ಮುಸ್ಲಿಂ ದಂಪತಿಗೆ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸುವ ಅಧಿಕಾರವನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ನೀಡಿ 2023ರ ಆಗಸ್ಟ್ 30ರಂದು ಹೊರಡಿಸಿದ್ದ ವಿವಾದಾತ್ಮಕ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.
ಈ ಕುರಿತಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಹೊರಡಿಸಿದ ಆದೇಶ ಪ್ರಶ್ನಿಸಿ ಬೆಂಗಳೂರಿನ ಎ. ಆಲಂ ಪಾಷಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ಪೀಠದ ಮುಂದೆ ಗುರುವಾರ ನಡೆದಿದೆ.
ಆಗ ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿ ಮುಸ್ಲಿಂ ಸಮುದಾಯದ ವಿವಾಹ ನೋಂದಣಿ ಹಾಗೂ ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಪ್ ಮಂಡಳಿಗೆ ನೀಡಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರದ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿಯನ್ನು ಇತ್ಯರ್ಥಪಡಿಸಿದೆ. 2024ರ ನವೆಂಬರ್ 21ರಂದು ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು.