ಬೆಂಗಳೂರು: ನಾವು ನಟ ದರ್ಶನ್ ಪರವೂ ಇಲ್ಲ, ಅವರ ವಿರುದ್ಧವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ. ಜೈಲಿನ ಒಳಗೆ ದರ್ಶನ್ ಮತ್ತು ಇನ್ನಿತರರಿಗೆ ರಾಜಾತಿಥ್ಯ ನೀಡುತ್ತಿರುವ ಘಟನೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಕರ್ತವ್ಯಲೋಪವಾಗಿದೆ. ಈ ವರೆಗೆ 7 ಜನರನ್ನು ಅಮಾನತು ಮಾಡಲಾಗಿದೆ, ಈ ಬಗ್ಗೆ ತನಿಖೆಯನ್ನೂ ಮಾಡಿಸಿ, ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಷಾಮೀಲಾಗಿದ್ದರೆ ಅವರನ್ನೂ ಅಮಾನತು ಮಾಡಲಾಗುವುದು ಎಂದು ಹೇಳಿದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
https://twitter.com/siddaramaiah/status/1827986545938190772?ref_src=twsrc%5Egoogle%7Ctwcamp%5Eserp%7Ctwgr%5Etweet