HomeKarnatakaಕರ್ನಾಟಕಕ್ಕೆ ಮೋದಿ ಸರ್ಕಾರದ ಕೊಡುಗೆ ಏನು ? ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕಕ್ಕೆ ಮೋದಿ ಸರ್ಕಾರದ ಕೊಡುಗೆ ಏನು ? ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬೆಂಗಳೂರು: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ನ್ಯಾಯಯುತ ತೆರಿಗೆ ಪಾಲು ಸಿಗುತ್ತಿಲ್ಲ. ರಾಜ್ಯದಲ್ಲಿ ಅನುಷ್ಠಾನಗೊಳ್ಳುವ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಹಣವನ್ನು ರಾಜ್ಯ ಸರ್ಕಾರವೇ ನೀಡುತ್ತಿದ್ದರೂ, ಕೇಂದ್ರ ಸರ್ಕಾರ ಮಾತ್ರ ಯೋಜನೆಗಳ ಸಂಪೂರ್ಣ ಶ್ರೇಯಸ್ಸನ್ನು ತನ್ನದಾಗಿಸಿಕೊಳ್ಳುತ್ತಿದೆ ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 13 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಕರ್ನಾಟಕ ದೇಶದ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಉದ್ಯೋಗ ಸೃಷ್ಟಿ, ಜಿಎಸ್‌ಟಿ ಸಂಗ್ರಹ ಹಾಗೂ ರಾಷ್ಟ್ರೀಯ ಆರ್ಥಿಕತೆಗೆ ರಾಜ್ಯ ಮಹತ್ವದ ಕೊಡುಗೆ ನೀಡುತ್ತಿದೆ. ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಕರ್ನಾಟಕದ ಪಾತ್ರ ದೊಡ್ಡದಾಗಿದೆ. ಆದರೆ, ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ಮಾತ್ರ ಕೇಳುತ್ತಿದ್ದೇವೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಕಸಿತ ಭಾರತ, ಅಮೃತ ಕಾಲ್, ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ ಸೇರಿದಂತೆ ಕೇಂದ್ರ ಸರ್ಕಾರದ ಹಲವು ಘೋಷಣೆಗಳು ಬೆಂಗಳೂರಿನಿಂದಲೇ ಆರಂಭವಾಗುತ್ತವೆ. ಆದರೆ, ಕರ್ನಾಟಕಕ್ಕೆ ಕೇಂದ್ರದಿಂದ ಸಿಗುತ್ತಿರುವ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಮೆಟ್ರೋ, ಜಲಜೀವನ್ ಮಿಷನ್ ಯೋಜನೆಗಳಿಗೂ ಕೇಂದ್ರದಿಂದಲೇ ಶ್ರೇಯಸ್ಸು!

ಮೆಟ್ರೋ ರೈಲು ಯೋಜನೆಯಿಂದ ಹಿಡಿದು ಜಲಜೀವನ್ ಮಿಷನ್‌ವರೆಗೆ ಹಲವು ಯೋಜನೆಗಳಲ್ಲಿ ರಾಜ್ಯ ಸರ್ಕಾರವೇ ಕೇಂದ್ರಕ್ಕಿಂತ ಹೆಚ್ಚಿನ ಹಣವನ್ನು ಕೊಡುಗೆಯಾಗಿ ನೀಡುತ್ತಿದೆ. ಆದರೂ ಕೇಂದ್ರ ಸರ್ಕಾರ ಎಲ್ಲ ಯೋಜನೆಗಳ ಶ್ರೇಯಸ್ಸನ್ನು ತಾನೇ ಪಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ. ಐಟಿ ಕ್ಷೇತ್ರ, ಜಿಎಸ್‌ಟಿ ಸಂಗ್ರಹ ಹಾಗೂ ಆರ್ಥಿಕ ಚಟುವಟಿಕೆಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ವಲಸಿಗರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ಕಲ್ಪಿಸುವ ರಾಜ್ಯಗಳಲ್ಲೂ ಕರ್ನಾಟಕ ಪ್ರಮುಖ ಸ್ಥಾನದಲ್ಲಿದೆ. ನಮ್ಮ ಸರ್ಕಾರದ ನೀತಿ ಮತ್ತು ಬಜೆಟ್‌ನಿಂದ ರಾಜ್ಯ ಅಭಿವೃದ್ಧಿ ಹೊಂದುತ್ತಿದೆ. ಆದರೆ, ಅದಕ್ಕೆ ಪ್ರತಿಯಾಗಿ ನಮಗೆ ಸಿಗಬೇಕಾದ ಪಾಲು ಸಿಗುತ್ತಿಲ್ಲ. ನಾವು ಯಾವುದೇ ವಿಶೇಷ ಸೌಲಭ್ಯ ಕೇಳುತ್ತಿಲ್ಲ, ನ್ಯಾಯಯುತ ತೆರಿಗೆ ಪಾಲನ್ನಷ್ಟೇ ಕೇಳುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಬೆಳೆ ಪರಿಹಾರಕ್ಕಾಗಿ ₹32 ಸಾವಿರ ಕೋಟಿ ಬೇಡಿಕೆ

ಬೆಳೆ ನಷ್ಟ ಪರಿಹಾರದ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ₹32,000 ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ ಎಂದರು.

ಕಳೆದ ಬಾರಿ ಕೇಂದ್ರ ಸರ್ಕಾರ ಪರಿಹಾರ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾಯಿತು. ನ್ಯಾಯಾಲಯದ ಸೂಚನೆಯ ನಂತರವೇ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿತ್ತು. ಈ ಬಾರಿಯಾದರೂ ಕರ್ನಾಟಕಕ್ಕೆ ಬರಬೇಕಾದ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂಬುದು ನಮ್ಮ ಮನವಿಯಾಗಿದೆ ಎಂದು ಹೇಳಿದರು.

ಈ ವರ್ಷದ ತೀವ್ರ ಬರಗಾಲವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕಿತ್ತು. ಆದರೆ, ಬಿಜೆಪಿ ನಾಯಕರು ಈ ವಿಚಾರದಲ್ಲಿ ಧ್ವನಿ ಎತ್ತುವ ಬದಲು ಸೋನಿಯಾ ಗಾಂಧಿ ಅವರ ಪುಸ್ತಕವನ್ನು ಟೀಕಿಸುವುದರಲ್ಲೇ ನಿರತರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸಂಸದರು ಮೋದಿ ವಿರುದ್ಧ ಮಾತನಾಡಲು ಹೆದರುತ್ತಿದ್ದಾರೆ

ರಾಜ್ಯದ ಬಿಜೆಪಿ ಸಂಸದರು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಶ್ನಿಸಲು ಹೆದರುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಬದಲು ರೀಲ್ಸ್ ಮಾಡುವುದರಲ್ಲಿ ಮತ್ತು ಮೋದಿ ಅವರನ್ನು ಹೊಗಳುವುದರಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದರು.

ಮಹಾರಾಷ್ಟ್ರದಲ್ಲಿ ಹಾಲಿನ ಬೆಲೆ ಏರಿಕೆಯಾದಾಗ ಬಿಜೆಪಿ ಮೌನವಾಗಿತ್ತು. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿದಾಗಲೂ ಬಿಜೆಪಿ ನಾಯಕರು ಮಾತನಾಡಲಿಲ್ಲ. ಕರ್ನಾಟಕದ ಬೆಳೆ ನಷ್ಟ ಪರಿಹಾರದ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಒಟ್ಟಿಗೆ ಮನವಿ ಸಲ್ಲಿಸಲು ನಮ್ಮೊಂದಿಗೆ ಬರಲಿ. ಆದರೆ, ಅವರು ಏಕೆ ಹಿಂದೇಟು ಹಾಕುತ್ತಿದ್ದಾರೆ? ಮೋದಿ ಅವರನ್ನು ಪ್ರಶ್ನಿಸಲು ಏಕೆ ಭಯಪಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ತಮ್ಮ ವಿರುದ್ಧದ ಎಫ್‌ಐಆರ್‌ ಬಗ್ಗೆಯೂ ಪ್ರತಿಕ್ರಿಯೆ

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ದೂರುದಾರರು ತಾವು ಆರ್‌ಎಸ್‌ಎಸ್ ಸದಸ್ಯ ಎಂದು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಆರ್‌ಎಸ್‌ಎಸ್ ಸದಸ್ಯತ್ವದ ಗುರುತಿನ ಚೀಟಿಯನ್ನು ತೋರಿಸಲಿ ಎಂದು ಸವಾಲು ಹಾಕಿದರು.

ಗೃಹ ಸಚಿವರಾಗಿದ್ದ ಮಾತ್ರಕ್ಕೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಬಾರದು ಎಂದೇನಿಲ್ಲ. ನಾವು ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತೇವೆ ಮತ್ತು ಕಾನೂನಿನ ಚೌಕಟ್ಟನ್ನು ಮೀರಿ ನಡೆದುಕೊಳ್ಳುವುದಿಲ್ಲ ಎಂದು ಹೇಳಿದರು.

ಕಲಬುರ್ಗಿ, ಗೌರಿ ಲಂಕೇಶ್ ಮತ್ತು ದಾಭೋಲ್ಕರ್ ಹತ್ಯೆಗಳ ಹಿಂದೆ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳ ಕೈವಾಡವಿದೆ ಎಂದು ತಾವು ಈ ಹಿಂದೆ ಆರೋಪಿಸಿದ್ದಾಗಿ ಪುನರುಚ್ಚರಿಸಿದ ಅವರು, ಈ ಪ್ರಕರಣಗಳು ನ್ಯಾಯಾಲಯದಲ್ಲಿವೆ. ನ್ಯಾಯಾಲಯಕ್ಕೆ ಸಾಕ್ಷ್ಯಗಳನ್ನು ಸಲ್ಲಿಸಲಾಗಿದೆ. ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರಬೇಕಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular