ಪರಿಷತ್ ಚುನಾವಣೆಯಲ್ಲೂ ಮುಂದುವರಿಯುತ್ತಾ ಬಿಜೆಪಿ – ಜೆಡಿಎಸ್ ಮೈತ್ರಿ ? ಕುತೂಹಲ ಕೆರಳಿಸಿದ ಮೇ 11ರ ಸಭೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 28 ಕ್ಷೇತ್ರಗಳ ಪೈಕಿ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಜೊತೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಅಳಿಯ ಡಾ. ಮಂಜುನಾಥ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲಾಗಿತ್ತು.

ಇದರ ಮಧ್ಯೆ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುವ ಸಂದರ್ಭದಲ್ಲಿ ಹಾಸನ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಗಳು ಹರಿದಾಡಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಮುಜುಗರಕ್ಕೆ ಕಾರಣವಾಗಿತ್ತು. ಈ ವಿಚಾರ ರಾಷ್ಟ್ರಮಟ್ಟದಲ್ಲೂ ಸದ್ದು ಮಾಡಿದ್ದ ಕಾರಣ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಉನ್ನತ ನಾಯಕರು ಸ್ಪಷ್ಟನೆ ನೀಡಬೇಕಾಯಿತು.

ಇದೀಗ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡೂ ಹಂತದ ಮತದಾನ ಪೂರ್ಣಗೊಂಡಿದ್ದು, ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ. ಇದರ ಮಧ್ಯೆ ಪದವೀಧರ ಮೂರು ಹಾಗೂ ಶಿಕ್ಷಕರ ಮೂರು ಕ್ಷೇತ್ರಗಳಿಂದ ವಿಧಾನ ಪರಿಷತ್ ಗೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಚುನಾವಣೆಗೂ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮುಂದುವರಿಸುತ್ತಾ ಎಂಬ ಕುತೂಹಲ ಮನೆ ಮಾಡಿದೆ.

ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ ,ನೈರುತ್ಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆದರೆ ಮೈತ್ರಿ ಮುಂದುವರಿಸುವ ಕುರಿತು ಬಿಜೆಪಿ ಯಾವುದೇ ಉತ್ಸುಕತೆ ತೋರುತ್ತಿಲ್ಲ ಎನ್ನಲಾಗಿದೆ. ಮೇ 11ರಂದು ರಾಜ್ಯ ಬಿಜೆಪಿಯ ಮಹತ್ವದ ಸಭೆ ನಡೆಯುತ್ತಿದ್ದು, ಮೈತ್ರಿ ಕುರಿತಂತೆ ಹೈಕಮಾಂಡ್ ನಾಯಕರು ಯಾವ ಸೂಚನೆ ನೀಡುತ್ತಾರೋ ಅದನ್ನು ಪಾಲಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read