ಕೊಪ್ಪಳ: ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಹಿರೇವಂಕಲಕುಂಟ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
23 ವರ್ಷದ ಮಲ್ಲಮ್ಮ ಕಲ್ಲೂರ ಮೃತ ಮಹಿಳೆ. ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆಗಾಗಿ ನಿನ್ನೆ ಮಲ್ಲಮ್ಮ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಎಡವಟ್ಟಿನಿಂದಾಗಿ ಮಹಿಳೆ ಸ್ಥಿತಿ ಗಂಭೀರವಾಗಿದೆ. ಅರವಳಿಕೆ ಚುಚ್ಚುಮದ್ದು ನೀಡದೇ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ.
ಜಿಲ್ಲಾಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಮಲ್ಲಮ್ಮ ಕೊನೆಯುಸಿರೆಳೆದಿದ್ದಾರೆ. ತಾಲೂಕು ಆಸ್ಪತ್ರೆಯ ವೈದ್ಯರ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.