ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುವಂತಿ ಕೋರಿ ಮಹಿಳೆಯರಿಬ್ಬರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಿಂಬಾಕಿ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರನಗರ ನಿವಾಸಿ ಆರ್. ಗಂಗಾ ಮತ್ತು ನಂದಿನಿ ಲೇಔಟ್ ನಿವಾಸಿ ಜಿ.ಡಿ. ಪವಿತ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ, ಪಂಚಾಯತ್ ರಾಜ್ಯ ಇಲಾಖೆ, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

