ರಾಜ್ಯಾದ್ಯಂತ ಕೆರೆ ಒತ್ತುವರಿ ತೆರವುಗೊಳಿಸುವ ಕಾರ್ಯ ಚುರುಕು : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ ಕೆರೆಗಳ ಸಮೀಕ್ಷೆ ಕಾರ್ಯವನ್ನು ಎಲ್ಲಾ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿದೆ. ಒತ್ತುವರಿಯಾಗಿದ್ದ 9,140 ಕೆರೆಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಈ ಪೈಕಿ 4,618 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿ ಒಟ್ಟು 32,648 ಕೆರೆಗಳಿದ್ದು, ಇಲಾಖೆ ಕೈಗೊಂಡಿರುವ ಸಮೀಕ್ಷೆಯಲ್ಲಿ 24,497 ಕೆರೆಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 9,140 ಕೆರೆಗಳು ಒತ್ತುವರಿಗೊಂಡಿವೆ. ಒತ್ತುವರಿಗೊಂಡ ಕೆರೆಗಳಲ್ಲಿ 4,618 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಿ, 8,697 ಎಕರೆ ಭೂಮಿಯನ್ನು ಜಿಲ್ಲಾ ಪಂಚಾಯತಿಗಳ ವಶಕ್ಕೆ ಪಡೆದುಕೊಳ್ಳಲಾಗಿದೆ. ಉಳಿದ 4,522 ಕೆರೆಗಳ ಒತ್ತುವರಿ ತೆರವುಗೊಳಿಸುವ ಕೆಲಸ ಪ್ರಗತಿಯಲ್ಲಿದೆ.

ಒಟ್ಟಾರೆ 32,648 ಕೆರೆಗಳಲ್ಲಿ ಬಾಕಿ ಉಳಿದ 8,151 ಕೆರೆಗಳ ಸಮೀಕ್ಷೆಯನ್ನು ಮುಂದಿನ 30 ದಿನಗಳ ಒಳಗೆ ಮುಗಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ.
ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಗೆ ಬರುವ 32,648 ಕೆರೆಗಳು 3,08,213 ಎಕರೆ ಪ್ರದೇಶವನ್ನು ಹೊಂದಿದೆ. ಇವುಗಳಲ್ಲಿ 24,497 ಕೆರೆಗಳು ವ್ಯಾಪಿಸಿರುವ ಒಟ್ಟು 2,15,594 ಎಕರೆ ಪ್ರದೇಶದ ಸರ್ವೆ ಕಾರ್ಯ ಸಂಪನ್ನಗೊಂಡಿದೆ. ರಾಜ್ಯದಲ್ಲಿ ಹಾಸನ ಜಿಲ್ಲೆ ಅತಿ ಹೆಚ್ಚು 6,367 ಕೆರೆಗಳನ್ನು ಹೊಂದಿದ್ದು, ಬಳ್ಳಾರಿ ಜಿಲ್ಲೆ ಅತಿ ಕಡಿಮೆ (21) ಕೆರೆಗಳನ್ನು ಹೊಂದಿದೆ. ಹೆಚ್ಚು ಕೆರೆಗಳನ್ನು ಹೊಂದಿದ ಜಿಲ್ಲೆಗಳಲ್ಲಿ ಶಿವಮೊಗ್ಗ (4354) ಹಾಗೂ ಮೈಸೂರು (2805) ಎರಡು ಹಾಗೂ ಮೂರನೇ ಸ್ಥಾನಗಳಲ್ಲಿವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read