ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಕಾರು ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದ ಬೆಂಕಿ ಹೊತ್ತಿಕೊಂಡು ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಅಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಮೂವರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಮೃತರನ್ನು ಪಟ್ಟಣ ಪಂಚಾಯತ್ ಸದಸ್ಯ ಕೃಷ್ಣ ನಾಯಕ್(52), ಅನಂತ ಕಲಾ ನಾಯಕ್ (45), ಶರಣಪ್ಪ (36), ನಿಸರ್ಗ ಶರಣಪ್ಪ (30) ಇವರ ಪುತ್ರ ಸಿದ್ಧಾರ್ಥ ಶರಣಪ್ಪ (3) ಮತ್ತು ಶಶಿಕಲಾ (30) ಶಶಿಕಲಾ ಪುತ ಚಂದನ್ (3), ಶರಣಪ್ಪ ದಂಪತಿಯ ಪುತ್ರಿ ಒಂದೂವರೆ ವರ್ಷದ ಮಗಳು ಶ್ರೀನಿಧಿ ಸೇರಿ 9 ಜನರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ರಾಯಚೂರು ಜಿಲ್ಲೆಯ ಸಿರಿವಾರ ಮೂಲದವರಾಗಿದ್ದಾರೆ.
ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ.
ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಸುರಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

