ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ಹೈಕೋರ್ಟ್, ಅವರಿಗೆ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ವಿನಯ್ ಕುಲಕರ್ಣಿ ದೋಷಿ ಎಂದು ನೀಡಿದ್ದ ತೀರ್ಪಿನ ಜಾರಿಗೆ ಮಧ್ಯಂತರ ತಡೆಯನ್ನೂ ನೀಡಿದೆ
ಹೈಕೋರ್ಟ್ 5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಒಬ್ಬ ಶ್ಯೂರಿಟಿಯನ್ನು ಸಲ್ಲಿಸುವಂತೆ ಷರತ್ತು ವಿಧಿಸಿದೆ. ಈ ಷರತ್ತುಗಳನ್ನು ಪೂರೈಸಿದ ಬಳಿಕ ಜಾಮೀನಿನ ಸೌಲಭ್ಯ ದೊರೆಯಲಿದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಸದ್ಯಕ್ಕೆ ಮಹತ್ವದ ನೆಮ್ಮದಿ ದೊರೆತಿದೆ.
ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಶೇಷ ನ್ಯಾಯಾಲಯ
2016ರಲ್ಲಿ ನಡೆದ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯವು 2026ರ ಏಪ್ರಿಲ್ 15ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿತ್ತು. ಬಳಿಕ ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಏನಿದು ಯೋಗೀಶ್ ಗೌಡ ಕೊಲೆ ಪ್ರಕರಣ?
2016ರ ಜೂನ್‌ನಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ವಿರುದ್ಧ ಆರೋಪಗಳು ದಾಖಲಾಗಿದ್ದವು. ನಂತರ ಪ್ರಕರಣವನ್ನು ಅಂದಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಸಿಬಿಐ ಸುದೀರ್ಘ ತನಿಖೆ ನಡೆಸಿ ಆರೋಪಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿತ್ತು. ಬಳಿಕ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

